ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಕೆಮ್ಮು ಹಾಗೂ ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಧರ್ಮಸ್ಥಳದ ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾಣದ ಹಿನ್ನಲೆಯಲ್ಲಿ ಗುರುವಾರ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಈ ಹಿಂದೆ ಕುಮಾರ ಸ್ವಾಮಿ ಅವರು ಉತ್ತರ ಕರ್ನಾಟಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ಅಭಿಮಾನಿಗಳು ಸಿಡಿಸಿದ್ದ ಪಟಾಕಿ ಹೊಗೆ ಸೇವನೆಯಿಂದ ಕುಮಾರ ಸ್ವಾಮಿ ಅವರ ಕೆಮ್ಮು ಮತ್ತು ಕಫ ಸಮಸ್ಯೆ ಉಲ್ಬಣಗೊಂಡಿದೆ ಎಂದು ಹೇಳಲಾಗುತ್ತಿದ್ದು, ಅವರಿಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗಿದೆ.
ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಕುಮಾರ ಸ್ವಾಮಿ ಅವರೊಂದಿಗೆ ಅವರ ಹತ್ತಿರದ ಸಂಬಂಧಿ ಹಾಗೂ ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕೂಡ ಸಿಂಗಾಪುರಕ್ಕೆ ತೆರಳಿದ್ದು, ಅವರ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಪಡೆದ ಬಳಿಕ ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಹೇಳಲಾಗಿದೆ.
Comments