ಪ್ರತ್ಯೇಕ ಧ್ವಜ ಪ್ರಸ್ತಾಪದಿಂದ ದೂರ ಸರಿದ ರಾಜ್ಯ ಸರ್ಕಾರ

ಇತ್ತೀಚಿನ ದಿನಗಳಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ರಾಜ್ಯಕ್ಕೆ ಪ್ರತ್ಯೇಕ ಧ್ವಜ ರಚನೆ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈ ಬಿಡಲು ತೀರ್ಮಾನಿಸಿದೆ.ಕಾನೂನಿನಲ್ಲಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕೆ ಅವಕಾಶ ಇಲ್ಲದೇ ಇರುವ ಕಾರಣ ಮುಂದೆ ಉಂಟಾಗಬಹುದಾದ ಮುಜುಗರವನ್ನು ತಪ್ಪಿಸಿಕೊಳ್ಳಲು ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ತಿಳಿದು ಬಂದಿದೆ.
ಸಂವಿಧಾನದ 370ನೇ ವಿಧಿಯ ಪ್ರಕಾರ ದೇಶದಲ್ಲೇ ಜಮ್ಮು ಮತ್ತು ಕಾಶ್ಮೀರ ಹೊರತು ಪಡಿಸಿದರೆ ಬೇರೆ ಯಾವುದೇ ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಹೊಂದಲು ಕಾನೂನಿನಲ್ಲಿ ಅವಕಾಶವಿಲ್ಲ.ಒಂದು ವೇಳೆ ಪ್ರತ್ಯೇಕ ಧ್ವಜ ಬೇಕೆಂದು ರಾಜ್ಯ ಸರ್ಕಾರ ಬಯಸಿದರೆ ಕೇಂದ್ರ ಸರ್ಕಾರ ಮಾನ್ಯ ಮಾಡಬೇಕು. ಕೇಂದ್ರವು ಅನುಮತಿ ನೀಡಿದರೂ ನ್ಯಾಯಾಲಯ ಊರ್ಜಿತಗೊಳಿಸುವುದಿಲ್ಲ.ಇದನ್ನು ಮನಗಂಡೆ ಸರ್ಕಾರ ಪ್ರತ್ಯೇಕ ಧ್ವಜದ ಪ್ರಸ್ತಾವನೆಯಿಂದ ಹಿಂದೆ ಸರಿಯಲು ಮುಂದಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜದ ಪ್ರಸ್ತಾವನೆ ಮಾಡಿದ್ದರು. ಇದಕ್ಕೆ ಸಾಕಷ್ಟು ಪರ-ವಿರೋಧ ವ್ಯಕ್ತವಾಗಿತ್ತು. ಕೆಲವು ಸಾಹಿತಿಗಳು, ಬರಹಗಾರರು, ಚಿಂತನಗಾರರು, ಕನ್ನಡ ಸಂಘಟನೆಗಳು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು. ಆದರೆ, ಉಳಿದ ಕೆಲ ಸಂಘಟನೆಗಳು ಸರ್ಕಾರದ ಈ ಕ್ರಮ ಒಕ್ಕೂಟದ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದವು. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜನರ ಭಾವನೆಗಳನ್ನು ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತಂತ್ರ ಅನುಸರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.
Comments