ಬೇಗ್ ವಿರುದ್ಧ ಕಾನೂನು ಸಮರ

ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಸಚಿವ ರೋಷನ್ ಬೇಗ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ನ್ಯಾಯಾಲಯದಲ್ಲಿ ಸಚಿವ ರೋಷನ್ ಬೇಗ್ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿ ಅವಹೇಳನಕಾರಿ ಹೇಳಿಕೆ ನೀಡಿದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ವಿರುದ್ಧ ಬಿಜೆಪಿ ನಾಯಕರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಪುಲಕೇಶಿನಗರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಸೂ.... ಮಗ, ಬೋ... ಮಗ ಎಂದೆಲ್ಲ ನಿಂದಿಸಿದ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಿಂತಕ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದರು.
ಈ ಹಿನ್ನೆಲೆಯಲ್ಲಿ ಬಿ ರಮಾನಾಥ್ ರೈ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ರಹೀಂ ಉಚ್ಚಿಲ್ ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಈಗಾಗಲೇ ನ್ಯಾಯಾಲಯ ಕೈಗೆತ್ತಿಗೊಂಡಿದೆ. ಪ್ರಧಾನಿ ಮೋದಿ ವಿರುದ್ದ ಅವಾಚ್ಯ ಪದಗಳಿಂದ ನಿಂದಿಸಿದ ಸಚಿವ ರೋಷನ್ ಬೇಗ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಬೇಗ್ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ಬೇಗ್ ವಿರುದ್ದ ದೂರು ನೀಡಲು ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಮುಖಂಡರು ತೀರ್ಮಾನಿಸಿದ್ದು ಕಾನೂನು ಹೋರಾಟಕ್ಕೆ ಸಜ್ಜಾಗುತ್ತಿವೆ.
Comments