ಸಾಲು ಸಾಲು ರಜೆಗಳಿಗೆ ಕೆಎಸ್ಆರ್ ಟಿಸಿಯಿಂದ ಸಿಗ್ತಿದೆ ಬಂಪರ್ ಆಫರ್..!!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹಾವೀರ ಜಯಂತಿ, ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28ರಿಂದ ಮಾ.31ರವರೆಗೆ ಬೆಂಗಳೂರಿನಿಂದ 850ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ.ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ, ಶಾಂತಿನಗರ ಬಸ್ ನಿಲ್ದಾಣದ ಸಮೀಪದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಹವಾನಿಯಂತ್ರಿತ ಬಸ್ ಕಾರ್ಯಾಚರಣೆ ಮಾಡಲಾಗುವುದು.
ಅಂತೆಯೇ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಕಡೆಗೆ ಬಸ್ ಸೌಲಭ್ಯ ಕಲ್ಪಿಸಲಾಗುವುದು. ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಏ.1ರಂದು ವಿಶೇಷ ಬಸ್ ಕಾರ್ಯಾಚರಣೆ ಇರಲಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
Comments