ಇಂದು ಸಂಜೆ ಕೇಂದ್ರ ಸಚಿವ ಅನಂತ್ ಕುಮಾರ್ ಅಂತ್ಯ ಸಂಸ್ಕಾರ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದರಾದ ಅನಂತ್ ಕುಮಾರ್(59) ಅವರು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 12 ರಿಂದ 14 ರ ವರೆಗೆ ರಾಜ್ಯಾದ್ಯಾಂತ ಶೋಕಾಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರಕ್ಕೆ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಆದರೆ ಇಂದು ಮಧ್ಯಾಹ್ನ 2.50 ರಿಂದ 4.20 ರ ವರೆಗೆ ರಾಹುಕಾಲ ಇದೆ. ಈ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎನ್ನಲಾಗಿದೆ. ರಾಹುಕಾಲ ಮುಗಿದ ಬಳಿಕ ಚಾಮರಾಜಪೇಟೆಯ ಟಿಆರ್ ಮಿಲ್ ನ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಬ್ರಾಹ್ಮಣ ಸಮುದಾಯದ ಅಶ್ವಲಾಯನ ಸ್ಮಾರ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಅನಂತ್ ಕುಮಾರ್ ಗೆ ಗಂಡು ಮಕ್ಕಳು ಇಲ್ಲದ ಕಾರಣ ಎಲ್ಲಾ ವಿಧಿ ವಿಧಾನಗಳನ್ನು ಅನಂತ್ ಕುಮಾರ್ ಸಹೋದರ ನಂದಕುಮಾರ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
Comments