NDA ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮೈತ್ರಿಕೂಟದ ಹಾಲಿ ಸಚಿವ ವೆಂಕಯ್ಯ ನಾಯ್ಡು ಅಧಿಕೃತವಾಗಿ ಕಣಕ್ಕಿಳಿದಿದ್ದಾರೆ. ಪ್ರಸ್ತುತ ನಾಯ್ಡು ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆ ಬಳಿಕ ವೆಂಕಯ್ಯನಾಯ್ಡು ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಭಾರತದವರನ್ನೇ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲು ಈ ಹಿಂದೆ ಬಿಜೆಪಿ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೆಸರು ಸಹ ಕೇಳಿಬಂದಿತ್ತು. ಇವತ್ತು ವೆಂಕಯ್ಯನಾಯ್ಡು ನಾಮಪತ್ರ ಸಲ್ಲಿಸಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಗೋಪಾಲಕೃಷ್ಣ ಗಾಂಧಿ ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿವೆ.
ಪಕ್ಷಗಳ ಬಲಾಬಲ ನೋಡಿದರೆ ಎನ್`ಡಿಎ ಬಲವೇ ಹೆಚ್ಚಿದ್ದು, ವೆಂಕಯ್ಯನಾಯ್ಡು ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Comments