ಸಿದ್ದು ವಿರುದ್ಧ ಎಸಿಬಿಗೆ ದೂರು ದಾಖಲಿಸಿದ ಬಿಜೆಪಿ ಮುಖಂಡರು
ಬೆಂಗಳೂರು : ಮುಖ್ಯಮಂತ್ರಿ ವಿರುದ್ಧ ಎಸಿಬಿಯಲ್ಲಿ ಈವರೆಗೆ 44 ಪ್ರಕರಣಗಳು ದಾಖಲಾಗಿದ್ದರೂ ಯಾವುದೇ ತನಿಖೆ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು 11 ದೂರುಗಳನ್ನು ದಾಖಲು ಮಾಡಿದ್ದೆ. ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು.
ವಕೀಲ ನಂಜುಂಡೇಗೌಡ ನೇತೃತ್ವದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಅವರು ತಿಳಿಸಿದರು. ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಮುಂದಿನ ಮೂರು ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಮಾಜಿ ಗೃಹ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
Comments