ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹಾಗೂ ಪ್ರಾಧಿಕಾರದ ಅಧ್ಯಕ್ಷ ಡಿ.ಧ್ರುವಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಧ್ರುವಕುಮಾರ್ ಅವರ ಜತೆಯಲ್ಲಿ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗಿರಿದರ್ಶಿನಿ ಬಡಾವಣೆಯಲ್ಲಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕ್ಷೇತ್ರದ ಶಾಸಕರೇ ಭೂಮಿಪೂಜೆ ನೆರವೇರಿಸಬೇಕು ಎಂದು ಪಟ್ಟುಹಿಡಿದರು. ಇದನ್ನು ಕಂಡು ಯತೀಂದ್ರ ಹಿಂದೆ ಸರಿದಾಗ ಕಾಂಗ್ರೆಸ್ ಕಾರ್ಯಕರ್ತರು ‘ಯತೀಂದ್ರ ಭಾಗಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ವರುಣಾ ಕ್ಷೇತ್ರದ ವಸತಿ ಯೋಜನೆಗಳ ಜಾಗೃತಿ ಸಮಿತಿಯ ಅಧ್ಯಕ್ಷ. ಅವರೂ ಜನಪ್ರತಿನಿಧಿ ಇದ್ದ ಹಾಗೆ’ ಎಂದು ಕಾಂಗ್ರೆಸ್ ಮುಖಂಡರು ಯತೀಂದ್ರ ಅವರಿಗೆ ಬೆಂಬಲವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು, ‘ವರುಣಾ ಕ್ಷೇತ್ರಕ್ಕಷ್ಟೇ ಯತೀಂದ್ರ ಸೀಮಿತರಾಗಬೇಕು. ಚಾಮುಂಡೇಶ್ವರಿ ಕ್ಷೇತ್ರದತ್ತ ಏಕೆ ಬರಬೇಕು’ ಎಂದು ಪ್ರಶ್ನಿಸಿದರು. ಉಭಯ ಪಕ್ಷಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪರಸ್ಪರ ಕೈ ಕೈ ಮಿಲಾಯಿಸುವ ಸ್ಥಿತಿಗೆ ತಲುಪಿದಾಗ ಮಧ್ಯಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು. ಯಾರೂ ಘೋಷಣೆಗಳನ್ನು ಕೂಗಬಾರದು ಎಂದು ಸೂಚಿಸಿ ಕಾರ್ಯಕ್ರಮ ಮುಂದುವರಿಸಲು ಅನುವು ಮಾಡಿಕೊಟ್ಟರು. ನಂತರ, ಜಿ.ಟಿ.ದೇವೇಗೌಡ ಭೂಮಿಪೂಜೆ ನೆರವೇರಿಸಿದರು.
Comments