ಅಂಬಿ ರಾಜಕೀಯಕ್ಕೆ ವಿದಾಯ ಹೇಳ್ತಾರಾ ..?
ಸಚಿವ ಸ್ಥಾನದಿಂದ ಕೈಬಿಟ್ಟ ಮೇಲೆ ಪಕ್ಷದ ಸಕ್ರಿಯ ಚಟುವಟಿಕೆಗಳಿಂದ ದೂರವಾಗಿರುವ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬೇರೆ ಪಕ್ಷ ಸೇರಲಿದ್ದಾರೆ ಎಂಬ ಗುಸು ಗುಸು ಶುರುವಾಗಿದೆ. ಅಂಬರೀಶ್ ಅವರ ನಡೆ ನಿಗೂಢವಾಗಿದೆ. ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.
ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿರುವ ರಮ್ಯಾ ಅವರು ಮಂಡ್ಯ ರಾಜಕೀಯಕ್ಕೆ ರೀ ಎಂಟ್ರಿ ಆಗಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದ್ದು, ಅಂಬರೀಶ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಪರ್ಯಾಯ ಮಾರ್ಗ ಹುಡುಕಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಯಾವುದೂ ಇನ್ನೂ ಖಚಿತವಾಗಿಲ್ಲ. ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಅಂಬರೀಶ್ ಅವರು ಪಾಲ್ಗೊಂಡಿಲ್ಲ. ದೂರದ ಪ್ರಯಾಣ ಮಾಡಲು ಸಾಧ್ಯವಾಗದ ಕಾರಣ ಅಧಿವೇಶನದಲ್ಲಿ ಪಾಲ್ಗೊಂಡಿಲ್ಲ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಸದ್ಯ ರಾಜಕೀಯದ ಬಗ್ಗೆ ಯಾವುದೇ ನಿರ್ಧಾರವನ್ನು ನಾನು ಕೈಗೊಳ್ಳುವುದಿಲ್ಲ. ಯಾವ ಪಕ್ಷ ಸೇರುವ ತೀರ್ಮಾನವನ್ನು ಕೂಡ ಮಾಡಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಅಂಬರೀಶ್ ಅವರು ಮಂಡ್ಯದಲ್ಲಿ ಅತ್ಯಂತ ಪ್ರಭಾವಿ ನಾಯಕರು. ಖ್ಯಾತ ಚಲನಚಿತ್ರ ನಟರು ಕೂಡ ಹೌದು. ಸಾಕಷ್ಟು ಅಭಿಮಾನಿಗಳು, ಬೆಂಬಲಿಗರನ್ನು ಹೊಂದಿದ್ದಾರೆ. ಅವರು ಶಾಸಕರಾಗಿ, ಸಂಸದರಾಗಿ, ಕೇಂದ್ರ ಹಾಗೂ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನೇನು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿದ್ದೇವೆ. ಮಂಡ್ಯ ಚುನಾವಣಾ ರಾಜಕಾರಣ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಅಂಬರೀಶ್ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಮಂಡ್ಯ ರಾಜಕಾರಣ ನಿಂತಿದೆ.
Comments