ಕುಮಾರ ಪರ್ವದ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ದೇವೇಗೌಡ್ರು ಹೇಳಿದ್ದು ಹೀಗೆ
ನೈಋತ್ಯ ರೈಲ್ವೆ ವಲಯಕ್ಕಾಗಿ ನಾನು ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಜೆಡಿಎಸ್ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಧಾನಿಯಾಗಿದ್ದಾಗ ಹುಬ್ಬಳ್ಳಿಯ ರೈಲ್ವೆ ವರ್ಕ್‍ಶಾಪ್‍ಗೆ 50 ಕೋಟಿ ರೂ. ಅನುದಾನ ನೀಡಿದ್ದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಎನ್‍ಡಿಎ ಅಡಿಗಲ್ಲು ಹಾಕಿತು. ಆದರೆ, ಎನ್‍ಡಿಎ ಮತ್ತೆ ಅಧಿಕಾರಕ್ಕೆ ಬಂದರೂ ಈ ಯೋಜನೆಗೆ ಏನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಅನುದಾನ ಸಿಗಬೇಕು.ಇನ್ನು ಮಹದಾಯಿ ವಿವಾದ ಇತ್ಯರ್ಥಪಡಿಸಲು ಪ್ರಧಾನಿಯಿಂದ ಸಾಧ್ಯ ಎಂದ ಅವರು, ನಾನು ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದು ವೈಯಕ್ತಿಕವಾಗಿ ಮನವಿ ಮಾಡಿದ್ದೆ. ಪ್ರಧಾನಿ ನರೇಂದ್ರಮೋದಿಯವರು ಎಲ್ಲವನ್ನೂ ಕೇಳಿಸಿಕೊಳ್ಳುತ್ತಾರೆ. ಆದರೆ, ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದರು. ಮಧ್ಯಂತರವಾಗಿ 8 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಬಿಡಬೇಕು. ಕಾವೇರಿ ವಿವಾದದಲ್ಲಿ ನಾನು ತೆಗೆದುಕೊಂಡ ಕ್ರಮ ಮೋದಿಗೆ ತೆಗೆದುಕೊಳ್ಳಲು ಏಕೆ ಆಗುವುದಿಲ್ಲ ಎಂದು ಪ್ರಶ್ನೆ ಮಾಡಿದರು. ಸಿಎಂ ಆಗಿದ್ದ ವೇಳೆ ಯಡಿಯೂರಪ್ಪ ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಕಾಮಗಾರಿ ನಡೆಸುವುದಿಲ್ಲ ಎಂದು ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು ಎಂದರು.
Comments