ಚನ್ನಪಟ್ಟಣ ಕ್ಷೇತ್ರದಿಂದ ಅನಿತಾಕುಮಾರಸ್ವಾಮಿ ಗೆ ಟಿಕೇಟ್ ಭರವಸೆ ನೀಡಿದ್ದಾರಂತೆ ಗೌಡ್ರು

ವರಿಷ್ಠರು ತಮ್ಮನ್ನು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಭರವಸೆ ಇದೆ ಎಂದು ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಜೆಡಿಎಸ್ ನಗರಘಟಕ ಮತ್ತು ಅಲ್ಪಸಂಖ್ಯಾತರ ವಿವಿಧ ಘಟಕದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು, ಕ್ಷೇತ್ರದ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ನಡೆದಿವೆ. ಯಾವ ಪಕ್ಷದಿಂದ ಯಾವ
ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬುದು ಇನ್ನೂ ನಿಗೂಢವಾಗಿದೆ. ಅಲ್ಲದೇ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಸಂಕ್ರಾಂತಿ ಹಬ್ಬದ ವೇಳೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ತಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, ಮುಂಬರುವ ಚುನಾವಣೆಯಲ್ಲಿ ತಾವೇ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಎಂದರು.
ಜೆಡಿಎಸ್ ಮುಖಂಡರು, ಕಾರ್ಯಕರ್ತರು ಯುವ ಘಟಕದ ಕಾರ್ಯಕರ್ತರನ್ನು ಗಣನೆಗೆ ಪಡೆದು ಪಕ್ಷದ ಸಂಘಟನೆಗೆ ಮುಂದಾಗಬೇಕು. ಯುವ ಮತ್ತು ನಗರ ಘಟಕದ ಕಾರ್ಯಕರ್ತರು ಸಕ್ರೀಯವಾಗಿ ಕೆಲಸ ಮಾಡಿ, ಪಕ್ಷದ ಗೆಲುವಿಗೆ ದುಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದರು.ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ ಮಾತನಾಡಿ, ಕ್ಷೇತ್ರದಲ್ಲಿ ದುರಾಡಳಿತ ಹೆಚ್ಚಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಸಾಮಾನ್ಯ ಜನರ ಕೆಲಸ ಕಾರ್ಯಗಳು ಆಗುತ್ತಿಲ್ಲ.
ಇವೆಲ್ಲವನ್ನು ಪ್ರಶ್ನಿಸುವ ನಾಯಕರು ಕ್ಷೇತ್ರಕ್ಕೆ ಅವಶ್ಯವಾಗಿದೆ. ತಾಲೂಕಿನಲ್ಲಿ ಮತ್ತೂಮ್ಮೆ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ಪಣತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ವರಿಷ್ಠರು ಅನಿತಾಕುಮಾರಸ್ವಾಮಿ ಅವರನ್ನು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಮನವಿ ಮಾಡಿದರು.
Comments