ವರಿಷ್ಠರು ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ: ಪ್ರಜ್ವಲ್ ರೇವಣ್ಣ
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು, ದೇವೇಗೌಡರು ಹಾಗೂ ಎಚ್.ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ವಹಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಈಗ ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ. ಚುನಾವಣೆಗೆ ಆರು ತಿಂಗಳು ಮಾತ್ರ ಬಾಕಿ ಇದ್ದು, ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ನಾನು ದುಡಿಯುತ್ತೇನೆ. ಎಲ್ಲರ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗದುಕೊಳ್ಳುತ್ತೇನೆ ಎಂದರು.
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯನ್ನು ಪಕ್ಷ ನನಗೆ ವಹಿಸಿದ್ದು, ಪಕ್ಷದ ವರಿಷ್ಠರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ, ಬೇಡವೋ ಎನ್ನುವ ನಿರ್ಧಾರವನ್ನು ಪಕ್ಷದ ವರಿಷ್ಠರು ತೆಗೆದುಕೊಳ್ಳುತ್ತಾರೆ. ಚುನಾವಣೆ ಸ್ಪರ್ಧೆ ಬಗ್ಗೆ ಈ ಹಿಂದೆ ಕೊಟ್ಟಂತಹ ಹೇಳಿಕೆಗಳ ಬಗ್ಗೆ ಈಗಾಗಲೇ ದೇವೇಗೌಡರಿಗೆ ಸ್ಪಷ್ಟೀಕರಣ ನೀಡಿದ್ದೇನೆ. ಕೊಟ್ಟ ಜವಾಬ್ದಾರಿ ನಿರ್ವಹಿಸುವುದಷ್ಟೇ ಈಗ ನನ್ನ ಕೆಲಸವೆಂದು ಪ್ರಜ್ವಲ್ ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಅವರ ವಿಕಾಸ ಯಾತ್ರೆಗೆ ಅಭೂತಪೂರ್ವ ಜನ ಬೆಂಬಲ ಸಿಕ್ಕಿದೆ. ಕುಮಾರಣ್ಣ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬುದು ಜನರ ಆಸೆಯಾಗಿದೆ. ರಾಜ್ಯದ ಜನರ ಸಂಕಷ್ಟಗಳಿಗೆ ರಾಷ್ಟ್ರೀಯ ಪಕ್ಷಗಳು ಸ್ಪಂದಿಸಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇದಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳಿದರು.ನೂತನ ಜವಾಬ್ದಾರಿ ನಂತರ ಮೊದಲ ಬಾರಿಗೆ ಬೇಲೂರಿಗೆ ಭೇಟಿ ನೀಡಿದ್ದ ಪ್ರಜ್ವಲ್ ಚೆನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Comments