ಬಿಜೆಪಿಯತ್ತ ಮುಖ ಮಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಷಣ್ಮುಖಪ್ಪ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮುಖಂಡ, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಷಣ್ಮುಖಪ್ಪರವರು ನಗರದ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕ ಬಿ.ವೈ.ರಾಘವೇಂದ್ರ, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡರವರು ಷಣ್ಮುಖಪ್ಪ ಮತ್ತವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಷಣ್ಮುಖಪ್ಪ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉತ್ತಮ ಆಡಳಿತ ಮೆಚ್ಚಿ ಹಾಗೂ ಬಿ.ಎಸ್.ಯಡಿಯೂರಪ್ಪರವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಉದ್ದೇಶದಿಂದ ತಾವು ಬಿಜೆಪಿ ಮರು ಸೇರ್ಪಡೆಯಾಗುತ್ತಿದ್ದೆನೆ ಎಂದು ತಿಳಿಸಿದರು.ಮುಂಬರುವ ವಿಧಾನಸಭೆ ಚುನಾಣೆಯಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೆನೆ. ಈಗಿನಿಂದಲೇ ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಮತಯಾಚನೆ ಮಾಡುತ್ತೆನೆ.
ಈ ಬಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯು ಅತ್ಯದಿಕ ಮತಗಳ ಅಂತರದಲ್ಲಿ ಜಯ ಸಾಧಿಸುವುದು ನಿಶ್ಚಿತವಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿ.ವೈ.ರಾಘವೇಂದ್ರ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ರಾಜ್ಯದಲ್ಲಿ ನವ ಕರ್ನಾಟಕ ನಿರ್ಮಾಣದ ಗುರಿಯೊಂದಿಗೆ ರಾಜ್ಯದಾದ್ಯಂತ ನಡೆಯುತ್ತಿರುವ ಪರಿವರ್ತನಾ ರ್ಯಾಲಿಯು ಡಿ.27ರಿಂದ ಜ.2 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
Comments