ಶಾಸಕ ಬಾಲಕೃಷ್ಣ ಅವರಿಗೆ ಬಿಜೆಪಿ ಗಾಳ ?

ಮಾಗಡಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ತೆರಳಿದ ಸಿಎಂ, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಇತರರು ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮನೆಗೆ ಭೇಟಿ ನೀಡಿ, ಸುಮಾರು 30 ನಿಮಿಷ ಮಾತುಕತೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಶಾಸಕ ಎಚ್.ಸಿ.ಬಾಲಕೃಷ್ಣ ಮನೆಗೆ ದಿಢೀರ್ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಶಾಸಕ ಬಾಲಕೃಷ್ಣ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಅನುಮಾನದಿಂದ ಸಿಎಂ, ಶಾಸಕರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಿಂದ ಬಾಲಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪುಟ್ಟಣ್ಣಯ್ಯ ಪ್ರತ್ಯಕ್ಷ: ಜೆಡಿಎಸ್ ವಿರುದ್ಧ ಬಂಡಾಯವೆದ್ದಿರುವ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಯ್ಯ ಸಹ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದರು. ಬಾಲಕೃಷ್ಣ ಮೂಲಕ ಪುಟ್ಟಣ್ಣಯ್ಯ ಅವರನ್ನು ಕರೆಸಿಕೊಂಡ ಸಿದ್ದರಾಮಯ್ಯ, ಅವರನ್ನು ಕಾಂಗ್ರೆಸ್ ಗೆ ಕರೆತರುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments