ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಜೆಡಿಎಸ್ ಗೆ ಸೇರ್ಪಡೆ...!!
ದಕ್ಷಿಣ ಕನ್ನಡದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶ್ರಫ್ ಜೆಡಿಎಸ್ ಸೇರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಮಾಹಿತಿ ಬಹಿರಂಗವಾಗಿದೆ.
ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಶ್ರಫ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ಸೇರುವಂತೆ ಆಹ್ವಾನ ನೀಡಿದ್ದಾರೆ.ಕರಾವಳಿಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಸರ್ವ ಪ್ರಯತ್ನ ನಡೆಸುತ್ತಿದ್ದಾರೆ . ಈ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಅಶ್ರಫ್ ಅವರನ್ನು ಕರೆತಂದು ಪಕ್ಷ ಬಲ ಪಡಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ.
ಜೆಡಿಎಸ್ ಅಶ್ರಫ್ ಅವರನ್ನು ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅಶ್ರಫ್, ಅಲ್ಪಸಂಖ್ಯಾತರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧವೇ ಧ್ವನಿ ಎತ್ತಿದ್ದರು. ಅವರನ್ನು ಪಕ್ಷ ಕ್ಕೆ ಕರೆತಂದರೆ ಅಲ್ಪಸಂಖ್ಯಾತರ ಮತ ಪಡೆಯಬಹುದೆಂಬ ಯೋಚನೆ ಜೆಡಿಎಸ್ ವರಿಷ್ಠರದ್ದು.ಮೇಯರ್ ಆಗಿದ್ದ ಸಂದರ್ಭದಲ್ಲಿ ಅಶ್ರಫ್ ಕೆಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಕಷ್ಟು ಜನಬೆಂಬಲ ಗಳಿಸಿದ್ದಾರೆ. ಈ ಪರಿಣಾಮ ಅಶ್ರಫ್ ಜೆಡಿಎಸ್ ಸೇರ್ಪಡೆ ಕಾಂಗ್ರೆಸ್ ಪಾಳಯಕ್ಕೆ ಮುಳ್ಳಾಗುವ ಸಾಧ್ಯತೆ ಇದೆ. ಅಶ್ರಫ್ ಮಂಗಳೂರು ದಕ್ಷಿಣದಿಂದ ಸ್ಪರ್ಧಿಸಿದರೆ ಚುನಾವಣಾ ಚಿತ್ರವಣವೇ ಬದಲಾಗಲಿದೆ.
Comments