Breaking News : ಬಿಜೆಪಿ ಯ ಈ ಶಾಸಕರು ಸಂಪರ್ಕದಲಿದ್ದಾರೆ; ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿಜೆಪಿ ಜೊತೆ ಕೈ ಜೋಡಿಸಲಿದ್ದಾರೆ ಎಂಬುದೆಲ್ಲ ಸುಳ್ಳು. ಬಿಜೆಪಿಯ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಯ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಪಕ್ಷ ಸೇರ್ಪಡೆಯ ಬಗ್ಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ ಎಂಬ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನಾಯಕರು. ಅವರ ಆರೋಗ್ಯ ವಿಚಾರಿಸಲು ನಾನು ಹಾಗೂ ಕೆಲ ಶಾಸಕರು ಧರ್ಮಸ್ಥಳದಲ್ಲಿರುವ ಶಾಂತಿವನಕ್ಕೆ ಭೇಟಿ ನೀಡಿದ್ದೆವು ಎಂದರು. ಸಿದ್ದರಾಮಯ್ಯ ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಉಪಕಾರ ಮಾಡಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಮ್ಮ ನಾಯಕನನ್ನು ಭೇಟಿಯಾದರೆ ವ್ಯಕ್ತಿ ಪೂಜೆ ಹೇಗಾಗುತ್ತದೆ. ಅದು ಶಿವಕುಮಾರ್ ಅವರ ವೈಯಕ್ತಿಕ ವಿಚಾರ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಜೆಡಿಎಸ್-ಕಾಂಗ್ರೆಸ್ ಪಕ್ಷದ ನೂತನ ಸಮ್ಮಿಶ್ರ ಸರಕಾರದ ಬಜೆಟ್ ಮಂಡಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧಿಸಿಲ್ಲ. ಹಿಂದಿನ ಸರಕಾರದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಮುಂದುವರೆಸುವಂತೆ ಸಲಹೆ ನೀಡಿದ್ದಾರೆ ಅಷ್ಟೇ ಎಂದು ಅವರು ತಿಳಿಸಿದರು.
Comments