ರೈತರ ಆತ್ಮಹತ್ಯೆ ಕುರಿತು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ

ಸಾಲಮನ್ನಾ ಘೊಷಣೆ ನಂತರವೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ 49 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಘೋಷಣೆ ಮಾಡಲಾಗಿದೆ. ಆದರೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಆತ್ಮಹತ್ಯೆ ಮಾಡಿಕೊಳ್ಳಲು ಸಾಲದ ಸಮಸ್ಯೆಯೇ..? ಬೆಳೆ ಸಮಸ್ಯೆಯೇ..? ಅಥವಾ ಬೇರೆ ಯಾವ ರೀತಿಯ ಸಮಸ್ಯೆ ಇದೆ ಎಂಬ ಬಗ್ಗೆ ಪರಿಶೀಲಿಸಿ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಬೇಕು ಎಂದು ಹೇಳಿದರು. ಕಳೆದ ಎರಡು ತಿಂಗಳಿನಿಂದ ಹಲವೆಡೆ ಭಾರೀ ಮಳೆಯಾಗಿದ್ದು, ರಸ್ತೆ, ಸೇತುವೆ, ವಿದ್ಯುತ್ ಮಾರ್ಗಗಳು ಹಾನಿಯಾಗಿವೆ.
ಬೆಳೆ ಹಾನಿ, ಪ್ರಾಣ ಹಾನಿಗಳಾಗಿವೆ. ಮಳೆ ಹಾನಿಗೆ ಸಂಬಂಧಿಸಿದಂತೆ ರಾಜ್ಯ ವಿಕೋಪ ಪರಿಹಾರ ನಿಧಿ ಮಾರ್ಗಸೂಚಿ ಅನ್ವಯ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಉಂಟಾಗಿದೆ. ಜನರು ಗುಳೆ ಹೋಗದಂತೆ ಸ್ಥಳೀಯವಾಗಿಯೇ ಕೆಲಸ ನಿರ್ವಹಿಸುವ ಕಾರ್ಯ ಕೈಗೊಳ್ಳಬೇಕು ಎಂದರು. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆಗೆ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡು ಭಾಗದಲ್ಲಿರುವ ಕಾಲುಸೇತುವೆ ಶಿಥಿಲವಾಗಿರುವುದನ್ನು ಗುರುತಿಸಿ ತಕ್ಷಣವೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಅತಿವೃಷ್ಟಿ-ಅನಾವೃಷ್ಟಿಯಿಂದ ಆಗಿರುವ ಆಸ್ತಿ, ಬೆಳೆ, ಜೀವ ಹಾನಿ ಬಗ್ಗೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಸೂಚನೆ ನೀಡಿದ್ದಾರೆ.
Comments