ಸೋಮವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

15 Feb 2020 1:30 PM | Politics
431 Report

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಉಭಯ ಸದನಗಳ ಪಕ್ಷದ ಶಾಸಕರ ಸಭೆ ವಿಧಾನಸೌಧದಲ್ಲಿ ಸೋಮವಾರ ಬೆಳಗ್ಗೆ ನಡೆಯಲಿದೆ.

ಸೋಮವಾರದಿಂದ ನಡೆಯುವ ಈ ವರ್ಷದ ಮೊದಲ ಹಾಗೂ ಜಂಟಿ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾಗಿರುವ ವಿಚಾರಗಳ ಬಗ್ಗೆ ಸಭೆಲ್ಲಿ ಸಮಾಲೋಚನೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದನದ ಒಳ-ಹೊರಗೆ ಜನರ ಪರವಾದ ಹೋರಾಟ ನಡೆಸುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

 

ಮಂಗಳೂರಿನಲ್ಲಿ ನಡೆದ ಗಲಾಟೆ, ಗೋಲಿಬಾರ್ ಪ್ರಕರಣ, ರೈತರ ಸಾಲಮನ್ನಾ ವಿಚಾರ, ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಜನರ ಪರಿಹಾರ ಕಾರ್ಯ ವಿಳಂಬ, ಕುಡಿಯುವ ನೀರು ಸೇರಿದಂತೆ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಜೆಡಿಎಸ್ ಉದ್ದೇಶಿಸಿದೆ.

ಮಹತ್ವದ ಈ ವಿಚಾರಗಳ ಬಗ್ಗೆ ಸರ್ಕಾರವನ್ನು ಯಾವ ರೀತಿ ತರಾಟೆಗೆ ತೆಗೆದುಕೊಳ್ಳಬೇಕು ಮತ್ತು ಜನರ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂಬ ವಿಚಾರದ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Courtesy: eesanje

Comments