ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ
ನಿಷೇಧಾಜ್ಞೆ ನಡುವೆಯೂ ಬಿಜೆಪಿಗೆ ಮೆರವಣಿಗೆಗೆ ಹೇಗೆ ಅವಕಾಶ ನೀಡಿದಿರಿ? ಮೊದಲೇ ಎಚ್ಚೆತ್ತುಕೊಂಡು ಯಾಕೆ ಕ್ರಮ ಕೈಗೊಂಡಿಲ್ಲ. ಬೆಂಗಳೂರು ಪೊಲೀಸರು ಏನಾದ್ರು ಆದರೆ ಕೂಡಲೇ ಸ್ಥಳಕ್ಕೆ ಹೋಗ್ತಾರೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಎಸ್ಪಿಗಳು ಸ್ಥಳಕ್ಕೆ ಹೋಗಬೇಕಾದ್ರೆ 5 ಹೆಣಗಳು ಬೀಳ್ಬೇಕಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪೊಲೀಸ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಕೋಮುಗಲಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಘಟನೆ ನಡೆದು 45 ದಿನವಾದರೂ ಯಾಕೆ ಕ್ರಮ ಕೈಗೊಂಡಿಲ್ಲ? ವಾರಕ್ಕೆ ಎಷ್ಟು ರೌಂಡ್ಸ್ ಮಾಡ್ತೀರಿ ಹೇಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದ್ದರು.
ಮಹಿಳೆಯರಿಗೆ ರಕ್ಷಣೆ ಸಿಗಬೇಕು, ದೌರ್ಜನ್ಯ ತಡೆಗಟ್ಟಬೇಕು. ಹಾಗಾಗಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
Comments