ಆಕಾಂಕ್ಷಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ಕೆಲಸ ಮಾಡದೆ ಹೋದರ್ರೆ ಟಿಕೆಟ್ ಕ್ಯಾನ್ಸಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಾಳೆ ನಡೆಯಲಿದೆ. ಪಕ್ಷದ ಕಚೇರಿಯಲ್ಲಿ ನಾಳೆ ಬೆಳಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಜೆಡಿಎಸ್‍ನ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿಯವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕೆಂಬ ಮಹದಾಸೆಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹೊಂದಿದ್ದಾರೆ.
ಇದಕ್ಕಾಗಿ ಶತಾಯ ಗತಾಯ ಪ್ರಯತ್ನಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ನಾಳಿನ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯ ತಂತ್ರ, ಪಕ್ಷದ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಎಲ್ಲರ ಮನವೊಲಿಸಿ ಸರ್ವಸಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗುವುದು. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಂಭಿರವಾಗಿ ಪರಿಗಣಿಸಿರುವ ದೇವೇಗೌಡರು, ಎಲ್ಲ ದೃಷ್ಟಿಕೋನಗಳಿಂದಲೂ ಅಳೆದು, ತೂಗಿ ನೋಡಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಉದ್ದೇಶಿಸಿದ್ದಾರೆ.ಯಾರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೆಲಸ ಮಾಡದೆ ಇದ್ದರೆ ಟಿಕೆಟ್ ನೀಡುವುದಿಲ್ಲ ಎಂದರು. ಕಚೇರಿಯಲ್ಲಿ ಕುಳಿತುಕೊಳ್ಳುವವರಿಗೆ ನಾವು ಮಣೆ ಹಾಕುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯ ಮುಂದಿಟ್ಟುಕೊಂಡು ಹೋರಾಟ ಮಾಡುವವರಿಗೆ ಟಿಕೆಟ್ ನೀಡಲಾಗುವುದು. ಕುಮಾರಸ್ವಾಮಿ ಸೇರಿದಂತೆ ಯಾರೇ ಆಗಲಿ ಜನರ ಬಳಿ ಹೋಗದೆ ಇದ್ದರೆ ಟಿಕೆಟ್ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.
ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡುವುದರ ಜತೆಗೆ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಪ್ರಬಲ ಪೈಪೋಟಿ ನೀಡಬಲ್ಲ ಆಕಾಂಕ್ಷಿಗಳಿಗೆ ಈಗಾಗಲೇ ಗೌಡರು ಟಿಕೆಟ್ ನೀಡುವ ಅಭಯ ನೀಡಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನಾಳೆ ನಡೆಯುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
Comments