ಸಿದ್ದರಾಮಯ್ಯ ಮತ್ತವರ ಆಪ್ತನ ವಿರುದ್ದ ದೇವೇಗೌಡರ ಬಾಂಬ್

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್. ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಸರಕಾರ ರಿಲೀವ್ ಮಾಡಿಲ್ಲ. ಅವರ ಕಚೇರಿಯನ್ನು ವಿಕಾಸಸೌಧದಿಂದ ಬೇರೆ ಕಡೆಗೆ ಶಿಫ್ಟ್ ಮಾಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ವಿಧಾನಸಭಾ ಚುನಾವಣೆ ಸಿದ್ಧತೆ ಪರಿಶೀಲಿಸಲು ನಗರಕ್ಕೆ ಆಗಮಿಸಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರನ್ನು ಭೇಟಿ ಮಾಡಿದ ದೇವೇಗೌಡರು ರಾಜ್ಯ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರು ಸಲ್ಲಿಸಿದರು. ಸರ್ಕಾರಿ ವಾಹನಗಳಲ್ಲಿ ಹಣ ಸಾಗಿಸುವ ಮೂಲಕ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರ ಹಿಂದೆ ಕೆಂಪಯ್ಯ ಅವರ ಕೈ ಚಳಕದ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಚುನಾವಣೆಗಾಗಿ ಹಣ ಸಂಗ್ರಹಿಸುತ್ತಿದ್ದಾರೆ. ರಾಮನಗರ, ಹಾಸನ, ಮಂಡ್ಯ, ಮೈಸೂರು ಭಾಗಗಳಲ್ಲಿ ತಮಗೆ ಬೇಕಾದ ಅಧಿಕಾರಿಗಳನ್ನು ಹಾಕಿಕೊಂಡು ನಿಷ್ಠಾವಂತರನ್ನು ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಪಾರದರ್ಶಕವಾಗಿ ಚುನಾವಣೆ ನಡೆಯುವುದು ಅನುಮಾನವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿವರಿಸಲಾಗಿದೆ.
Comments