ರಾಮನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಕುಮಾರಣ್ಣ

ರಾಮನಗರ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರ ಮಡದಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಅನಿತಾ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಕಾರ್ಯಕರ್ತರಿಂದ ಬಂದಿರುವುದು ನಿಜ ಆದರೆ ಈ ಬಗ್ಗೆ ಇನ್ನೂ ಅಧಿಕೃತ ನಿರ್ಣಯ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಕಾರ್ಯಕರ್ತರ ಮನ ಅರಿತು ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದಿದ್ದಾರೆ ಆ ಮೂಲಕ ಅನಿತಾ ಅಥವಾ ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ರಾಮನಗರ ಉಪಚುನಾವಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ, ದಿನಾಂಕ ನಿಗದಿಯಾದ ಬಳಿಕ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ ಎಂದಿದ್ದಾರೆ. ಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಹಿರಿಯ ಮುಖಂಡ ವೈ.ಎಸ್.ವಿ ದತ್ತ ಅಥವಾ ಮೇಲುಕೋಟೆಯಲ್ಲಿ ಸೋಲನ್ನನುಭವಿಸಿರುವ ದರ್ಶನ್ ಪುಟ್ಟಣ್ಣಯ್ಯ ಅವರಲ್ಲಿ ಯಾರಾದರೂ ಒಬ್ಬರಿಗೆ ರಾಮನಗರದ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರಬೇಕು ಎಂಬ ಒತ್ತಾಯವೂ ಸಾಮಾಜಿಕ ಜಾಲತಾಣದಲ್ಲಿದೆ.
Comments